ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 3 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಏಪ್ರಿಲ್ 2027
ಶನಿವಾರ · ಮಹಾ ಉಪವಾಸದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
ಮೃತರ ಸ್ಮರಣೆಯ ಶನಿವಾರ
ಮಹಾ ಉಪವಾಸ ಕಾಲ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಮೃತರು)
13ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಪತ್ರಿಕೆ
32ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. 33ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. 34ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. 35ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. 36ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
ಸುವಾರ್ತೆ (ಮೃತರು)
24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. 25ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. 30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
ಸುವಾರ್ತೆ
14ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. 15ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. 16ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 17ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 3 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು