Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 16 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 3 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಏಪ್ರಿಲ್ 2027

ಶುಕ್ರವಾರ · ಮಹಾ ಉಪವಾಸದ ಐದನೆಯ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Venerable Nicetas the Confessor, Abbot of Medikion († 824)

ಮಹಾ ಉಪವಾಸ ಕಾಲ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 45:11–17

11ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. 12ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ. 13ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. 14ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’” 15ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. 16ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು. 17ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 22:1–18

1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು. 2ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು. 3ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. 4ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ, 5“ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು. 6ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು. 7ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, 8ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು. 9ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. 10ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. 11ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. 12ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. 13ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. 14ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. 15ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, 16“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ 17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. 18ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 17:17–18:5

17ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ. 18ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ. 19ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. 20ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು. 21ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ. 22ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ. 23ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು. 24ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. 25ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ. 26ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ. 27ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ. 28ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. 18:1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. 2ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ. 3ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ. 4ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ. 5ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 16 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು