Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 18 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಏಪ್ರಿಲ್ 2027

ಭಾನುವಾರ · ಪಾಸ್ಕ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ನಾಲ್ಕನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 4:8–12

8ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, 9ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. 10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. 11“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. 12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಪ್ರತಿವಚನ ಕೀರ್ತನೆ

ಕೀರ್ತ 118:1, 8–9, 21–23, 26, 28–29

1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 8ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 9ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 28ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. 29ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

ಎರಡನೆಯ ವಾಚನ

1 ಯೋಹಾ 3:1–2

1ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. 2ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.

ಸುವಾರ್ತೆ

ಯೋಹಾ 10:11–18

11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು. 17ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. 18ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು