Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 18 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಏಪ್ರಿಲ್ 2027

ಭಾನುವಾರ · ಸ್ವರ 5

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ಐದನೆಯ ಭಾನುವಾರ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಎರಡನೆಯ ಸುವಾರ್ತೆ

ಮಾರ್ಕ 16:1–8

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಪತ್ರಿಕೆ

ಇಬ್ರಿ 9:11–14

11ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ, 12ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. 13ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ, 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಪತ್ರಿಕೆ (ಸಂತ ಮರಿಯ)

ಗಲಾ 3:23–29

23ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಸುವಾರ್ತೆ

ಮಾರ್ಕ 10:32–45

32ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು; 33ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು. 34ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು. 36ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು, 37ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು. 38ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. 39ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು. 40ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. 41ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು. 42ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ. 43ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. 44ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು. 45ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಸುವಾರ್ತೆ (ಸಂತ ಮರಿಯ)

ಲೂಕ 7:36–50

36ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. 37ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು, 38ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. 39ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. 40ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು. 41ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. 42ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ, 43ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ, 44ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. 45ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ. 46ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. 47ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. 48ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 49ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 50ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 18 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು