ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 4 ಮೇ
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಮೇ 2027
ಮಂಗಳವಾರ · ಉಜ್ವಲ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
ಉಜ್ವಲ ವಾರದ ಮಂಗಳವಾರ
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. 15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. 16ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ, 17“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; 18ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು. 19ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 21ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
ಸುವಾರ್ತೆ
12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. 13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, 19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. 25ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. 27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು. 29ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, 33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. 34“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. 35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 4 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು