ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 6 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಮೇ 2027
ಗುರುವಾರ · ಪಾಸ್ಕ ಕಾಲದ ಆರನೆಯ ವಾರ
ಹಬ್ಬಗಳು ಮತ್ತು ಸಂತರು
ಕರ್ತನ ಸ್ವರ್ಗಾರೋಹಣ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು, 2ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. 3ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು. 4ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, 5ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. 6ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು 7ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ. 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು. 9ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. 10ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. 11“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
ಎರಡನೆಯ ವಾಚನ
1ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, 5ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. 7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” 9“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
ಸುವಾರ್ತೆ
15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು