Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 8 ಮೇ

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 25 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಮೇ 2027

ಶನಿವಾರ · ಉಜ್ವಲ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

ಉಜ್ವಲ ವಾರದ ಶನಿವಾರ

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಮಾರ್ಕ)

ಯಾಕೋ 1:1–12

1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” 2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. 5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. 6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ. 7ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ. 9ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು. 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಮಾರ್ಕ)

ಯಾಕೋ 1:13–27

13ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. 16ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. 17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ. 18ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು. 19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. 20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. 22ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. 26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. 27ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ಮಾರ್ಕ)

ಯಾಕೋ 2:1–13

1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. 2ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, 4ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? 5ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ? 8ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. 9ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. 10ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. 11ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. 12ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. 13ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಉದಯಕಾಲದ ಪ್ರಾರ್ಥನೆ: ಸುವಾರ್ತೆ (ಸಂತ ಮಾರ್ಕ)

ಲೂಕ 10:1–15

1ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. 4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. 5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. 6ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. 7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. 8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. 9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ. 10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, 11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. 12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ. 13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು. 14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. 15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.

ಪತ್ರಿಕೆ

ಅ. ಕೃ 3:11–16

11ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು. 12ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ. 13ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ. 14ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ. 15ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು. 16ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ಪತ್ರಿಕೆ (ಸಂತ ಮಾರ್ಕ)

1 ಪೇತ್ರ 5:6–14

6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. 7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ. 8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. 9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. 10ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. 11ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. 12ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ. 13ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. 14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.

ಸುವಾರ್ತೆ

ಯೋಹಾ 3:22–33

22ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು. 23ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. 24ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ. 25ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು. 26ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು 27ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು. 28‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. 29ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು. 30ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು. 31ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು. 32ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ. 33ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.

ಸುವಾರ್ತೆ (ಸಂತ ಮಾರ್ಕ)

ಮಾರ್ಕ 6:7–13

7ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು. 10ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. 11ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು. 12ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು. 13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 8 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು