ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 9 ಮೇ
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಮೇ 2027
ಭಾನುವಾರ · ಸ್ವರ 1
ಹಬ್ಬಗಳು ಮತ್ತು ಸಂತರು
ಆಂಟಿಪಾಸ್ಕ: ಪಾಸ್ಕದ ಎರಡನೆಯ ಭಾನುವಾರ
ತೋಮನ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಮೊದಲನೆಯ ಸುವಾರ್ತೆ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಪತ್ರಿಕೆ
12ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು. 13ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು. 14ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು. 15ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು. 16ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು. 17ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು, 18ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. 19ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, 20“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
ಸುವಾರ್ತೆ
19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 9 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು