Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 10 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಜೂನ್ 2027

ಗುರುವಾರ · ಸಾಮಾನ್ಯ ಕಾಲದ 10ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 10ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 3:15–4:1, 3–6

15ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. 16ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. 17ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ. 18ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ. 4:1ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. 3ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. 4ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. 5ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ. 6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಪ್ರತಿವಚನ ಕೀರ್ತನೆ

ಕೀರ್ತ 85:8–13

8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

ಸುವಾರ್ತೆ

ಮತ್ತಾ 5:20–26

20ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. 21“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. 22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. 23ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, 24ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. 25“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. 26ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು