ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 10 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಮೇ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಜೂನ್ 2027
ಗುರುವಾರ · ಪಾಸ್ಕದ ಆರನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
ಕರ್ತನ ಸ್ವರ್ಗಾರೋಹಣ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
2ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. 3ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
ಸಂಧ್ಯಾ ಪ್ರಾರ್ಥನೆ: ವಾಚನ
10ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ! 11“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. 12ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು. 63:1ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ. 2ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ? 3ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು. 7ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು. 8“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು. 9ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ಸಂಧ್ಯಾ ಪ್ರಾರ್ಥನೆ: ವಾಚನ
1ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು. 4ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. 8ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು. 9ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು. 10ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು. 11ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
ಉದಯಕಾಲದ ಪ್ರಾರ್ಥನೆ: ಸುವಾರ್ತೆ
9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಪತ್ರಿಕೆ
1ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು, 2ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. 3ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು. 4ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, 5ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. 6ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು 7ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ. 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು. 9ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. 10ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. 11“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು. 12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
ಸುವಾರ್ತೆ
36ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. 50ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. 51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, 53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಮೇ ಎಂದರೆ ನಾಗರಿಕ ಪಂಚಾಂಗದ 10 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು