Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 14 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಜೂನ್ 2027

ಸೋಮವಾರ · ಸಾಮಾನ್ಯ ಕಾಲದ 11ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 11ನೇ ವಾರದ ಸೋಮವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 6:1–10

1ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. 2“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ. 3ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ. 4ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ, 5ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ. 6ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ, 7ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ. 8ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. 9ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ, 10ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಪ್ರತಿವಚನ ಕೀರ್ತನೆ

ಕೀರ್ತ 98:1–4

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

ಸುವಾರ್ತೆ

ಮತ್ತಾ 5:38–42

38“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ. 39ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು. 40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು. 41ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು. 42ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು