ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 23 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಜೂನ್ 2027
ಬುಧವಾರ · ಸಾಮಾನ್ಯ ಕಾಲದ 12ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 12ನೇ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” 2ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. 3ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. 4ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, 5“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. 6ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು. 7ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. 8“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. 9ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. 10ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ. 11ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. 12ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು. 17ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. 18ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. 2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ಸುವಾರ್ತೆ
15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. 16ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? 17ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; 18ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. 19ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. 20ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು