Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 28 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಜೂನ್ 2027

ಸೋಮವಾರ · ಸಾಮಾನ್ಯ ಕಾಲದ 13ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 13ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಸಂತ ಐರೇನಿಯಸ್, ಧರ್ಮಾಧ್ಯಕ್ಷ, ಹುತಾತ್ಮ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 18:16–33

16ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು. 17ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ? 18ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ; 19ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು. 20ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು, 21ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು. 22ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು. 23ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? 24ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? 25ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. 26ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. 27ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ; 28ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. 29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು. 30ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. 31ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು. 32ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು. 33ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಪ್ರತಿವಚನ ಕೀರ್ತನೆ

ಕೀರ್ತ 103:1–4, 8–11

1ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. 2ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. 3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, 4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. 8ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. 9ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. 10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. 11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಸುವಾರ್ತೆ

ಮತ್ತಾ 8:18–22

18ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು. 19ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, 20ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. 21ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ, 22ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು