Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 1 ಜುಲೈ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಜುಲೈ 2027

ಗುರುವಾರ · ಸಾಮಾನ್ಯ ಕಾಲದ 13ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 13ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 22:1–19

1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು. 2ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು. 3ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. 4ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ, 5“ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು. 6ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು. 7ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, 8ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು. 9ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. 10ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. 11ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. 12ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. 13ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. 14ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. 15ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, 16“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ 17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. 18ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು. 19ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.

ಪ್ರತಿವಚನ ಕೀರ್ತನೆ

ಕೀರ್ತ 116:1–6, 8–9

1ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. 2ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. 3ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. 4ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. 5ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. 6ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. 8ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, 9ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ಸುವಾರ್ತೆ

ಮತ್ತಾ 9:1–8

1ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು. 2ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 3ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. 4ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ? 5ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ? 6ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು. 7ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. 8ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು