Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 4 ಜುಲೈ

ಆರ್ಥೊಡಾಕ್ಸ್ ಪಂಚಾಂಗ · ಜೂನ್ 21 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಜುಲೈ 2027

ಭಾನುವಾರ · ಸ್ವರ 1

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ ಎರಡನೆಯ ಭಾನುವಾರ

ಅಮೆರಿಕದ ಎಲ್ಲಾ ಸಂತರು; ರಷ್ಯಾದ ಎಲ್ಲಾ ಸಂತರು

ಅಪೊಸ್ತಲರ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಯೆಶಾ 43:9–14

9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ. 10ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. 11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು. 13ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು. 14ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಎರಡನೆಯ ಸುವಾರ್ತೆ

ಮಾರ್ಕ 16:1–8

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಪತ್ರಿಕೆ

ರೋಮಾ 2:10–16

10ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. 11ದೇವರಲ್ಲಿ ಪಕ್ಷಪಾತವಿಲ್ಲ. 12ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು. 13ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. 14ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ. 15ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. 16ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.

ಪತ್ರಿಕೆ (ಸಂತರು)

ಇಬ್ರಿ 11:33–12:2

33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., 34ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. 36ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. 39ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು. 12:1ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ಸುವಾರ್ತೆ

ಮತ್ತಾ 4:18–23

18ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು. 19ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ, 20ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 21ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು. 22ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 23ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಸುವಾರ್ತೆ (ಸಂತರು)

ಮತ್ತಾ 4:25–5:12

25ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಜೂನ್ ಎಂದರೆ ನಾಗರಿಕ ಪಂಚಾಂಗದ 4 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು