ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 25 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 12 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಜುಲೈ 2027
ಭಾನುವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ ಐದನೆಯ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಐದನೆಯ ಸುವಾರ್ತೆ
12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. 13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, 19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. 25ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. 27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು. 29ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, 33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. 34“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. 35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.
ಪತ್ರಿಕೆ
1ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ. 2ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. 3ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. 4ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು. 5ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ. 6ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’ 7ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. 8“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. 9ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. 10ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
ಸುವಾರ್ತೆ
28ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. 29ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. 30ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. 31ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು. 32ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು. 33ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; 34ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. 9:1ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಜುಲೈ ಎಂದರೆ ನಾಗರಿಕ ಪಂಚಾಂಗದ 25 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು