ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜುಲೈ 2027 › 28 ಜುಲೈ
ಆರ್ಥೊಡಾಕ್ಸ್ ಪಂಚಾಂಗ · ಜುಲೈ 15 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಜುಲೈ 2027
ಬುಧವಾರ · ಪಂಚಾಶತ್ತಮದ ನಂತರದ ಆರನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Quriaqos and his mother Julitta
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ವ್ಲಾದಿಮಿರ್)
22ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು, 23“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು. 27“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು? 28ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು. 29ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು. 30ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ವ್ಲಾದಿಮಿರ್)
10ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. 11ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು. 62:1ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು. 2ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು. 3ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ. 4ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. 5ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
ಸಂಧ್ಯಾ ಪ್ರಾರ್ಥನೆ: ವಾಚನ (ಸಂತ ವ್ಲಾದಿಮಿರ್)
1ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ. 2ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು. 3ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು. 4ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ. 5ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು. 6ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು. 7ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು. 8ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು? 9ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ. 10ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ. 11ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು. 12ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು. 13ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. 14ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು. 15ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. 16ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
ಉದಯಕಾಲದ ಪ್ರಾರ್ಥನೆ: ಸುವಾರ್ತೆ
9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
ಪತ್ರಿಕೆ (ಸಂತ ವ್ಲಾದಿಮಿರ್)
11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. 12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು. 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. 15ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, 16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ, 17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. 18ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. 19ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಸುವಾರ್ತೆ (ಸಂತ ವ್ಲಾದಿಮಿರ್)
1“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. 2ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. 3ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. 4ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. 5ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ. 6ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. 7ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಜುಲೈ ಎಂದರೆ ನಾಗರಿಕ ಪಂಚಾಂಗದ 28 ಜುಲೈ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು