Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 18 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಆಗಸ್ಟ್ 2027

ಬುಧವಾರ · ಸಾಮಾನ್ಯ ಕಾಲದ 20ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 20ನೇ ವಾರದ ಬುಧವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ನ್ಯಾಯ 9:6–15

6ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು. 7ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು. 8“ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು. 9ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು. 10ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು 11ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. 12ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು 13ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. 14ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು 15ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.

ಪ್ರತಿವಚನ ಕೀರ್ತನೆ

ಕೀರ್ತ 21:1–6

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. 2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ 3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ. 4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. 5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ. 6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

ಸುವಾರ್ತೆ

ಮತ್ತಾ 20:1–16

1“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. 2ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು. 3ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು, 4ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು. 5ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು. 6ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು. 7ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು. 8ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು. 9ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. 10ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. 11ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ, 12‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು. 13ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ? 14ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ. 15ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು. 16ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು