ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 26 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಆಗಸ್ಟ್ 2027
ಗುರುವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Apodosis of the Transfiguration of the Lord
ದೇವಮಾತೆಯ ನಿದ್ರಾಗಮನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. 11:1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ. 5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು. 9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು. 10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
ಪತ್ರಿಕೆ
1ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ, 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ. 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, 4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ. 5ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ. 6ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. 7ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
ಪತ್ರಿಕೆ (ಸಂತ ಟಿಖೋನ್)
26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
ಸುವಾರ್ತೆ
43ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು. 44ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು. 45ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು; 46ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
ಸುವಾರ್ತೆ (ಸಂತ ಟಿಖೋನ್)
14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. 15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. 16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. 17“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. 18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. 19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 26 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು