Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 29 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 16 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 29 ಆಗಸ್ಟ್ 2027

ಭಾನುವಾರ · ಸ್ವರ 1

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 10ನೇ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 10ನೇ ಸುವಾರ್ತೆ

ಯೋಹಾ 21:1–14

1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಪತ್ರಿಕೆ

1 ಕೊರಿ 4:9–16

9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ, 12ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಪತ್ರಿಕೆ (ಕೈಯಿಂದ ಮಾಡದ ಐಕಾನ್)

ಕೊಲೊ 1:12–18

12ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. 13ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. 14ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. 15ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. 16ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. 17ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. 18ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಸುವಾರ್ತೆ

ಮತ್ತಾ 17:14–23

14ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, 15“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. 16ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು. 17ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು. 18ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು. 19ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?” 20ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, 21ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. 22ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು. 23ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಸುವಾರ್ತೆ (ಕೈಯಿಂದ ಮಾಡದ ಐಕಾನ್)

ಲೂಕ 9:51–56; 10:22–24

51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು. 52ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. 53ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. 54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, 55ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು. 56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. 10:22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 16 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 29 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು