ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 12 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಸೆಪ್ಟೆಂಬರ್ 2027
ಭಾನುವಾರ · ಸಾಮಾನ್ಯ ಕಾಲದ 24ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 24ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
5ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ. 6ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. 7ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು. 8ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ. 9ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
ಪ್ರತಿವಚನ ಕೀರ್ತನೆ
1ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. 2ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. 3ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. 4ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. 5ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. 6ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. 8ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, 9ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
ಎರಡನೆಯ ವಾಚನ
14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? 15ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, 16ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು? 17ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು. 18ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
ಸುವಾರ್ತೆ
27ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು. 28ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು. 29ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು. 30ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. 31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. 32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು. 33ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. 34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು