ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 18 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಸೆಪ್ಟೆಂಬರ್ 2027
ಶನಿವಾರ · ಸಾಮಾನ್ಯ ಕಾಲದ 24ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 24ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
13ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ, 14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು. 15ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, 16ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
ಪ್ರತಿವಚನ ಕೀರ್ತನೆ
1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಸುವಾರ್ತೆ
4ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ, 5“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು. 6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು. 9ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ, 10ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ. 11ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ. 12ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. 13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು. 14ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು. 15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು