ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 27 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 14 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಸೆಪ್ಟೆಂಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 15ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
The Universal Exaltation of the Precious and Life-Giving Cross
ಒಂದು ದಿನದ ಉಪವಾಸ · ಕಟ್ಟುನಿಟ್ಟಿನ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
22ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು. 23ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. 24ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು. 25ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು. 26ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು. 27ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು. 16:1ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
ಸಂಧ್ಯಾ ಪ್ರಾರ್ಥನೆ: ವಾಚನ
11ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. 12ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. 13ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. 14ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. 15ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. 16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು. 17ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. 18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
ಸಂಧ್ಯಾ ಪ್ರಾರ್ಥನೆ: ವಾಚನ
11ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು. 12ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು. 13ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. 14ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು. 15ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. 16ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
ಉದಯಕಾಲದ ಪ್ರಾರ್ಥನೆ: ಸುವಾರ್ತೆ
28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. 29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. 30ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು 32ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. 33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. 34ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. 35ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. 36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
ಪತ್ರಿಕೆ (ಶಿಲುಬೆಯ ಉನ್ನತೀಕರಣ)
18ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ. 19“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ. 20ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? 21ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು. 22ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; 23ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. 24ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
ಸುವಾರ್ತೆ (ಶಿಲುಬೆಯ ಉನ್ನತೀಕರಣ)
ಯೋಹಾ 19:6–11, 13–20, 25–28, 30–35
6ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು. 7ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು. 8ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, 9ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. 10ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು. 11ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. 13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. 14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. 15ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. 17ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ. 18ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು. 19ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. 20ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. 25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. 26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. 27ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. 28ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು. 30ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. 31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. 33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 27 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು