Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 30 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಸೆಪ್ಟೆಂಬರ್ 2027

ಗುರುವಾರ · ಸಾಮಾನ್ಯ ಕಾಲದ 26ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 26ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಜೆರೋಮ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ನೆಹೆ 8:1–12

1ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು. 2ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು. 3ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು. 4ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು. 5ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು. 6ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು. 7ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು. 8ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು. 9ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು. 10ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು. 11ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು. 12ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಪ್ರತಿವಚನ ಕೀರ್ತನೆ

ಕೀರ್ತ 19:7–10

7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. 8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಸುವಾರ್ತೆ

ಲೂಕ 10:1–12

1ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. 4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. 5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. 6ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. 7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. 8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. 9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ. 10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, 11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. 12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು