ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 3 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಅಕ್ಟೋಬರ್ 2027
ಭಾನುವಾರ · ಸಾಮಾನ್ಯ ಕಾಲದ 27ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 27ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
18ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. 19ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. 20ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. 21ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. 22ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, 23“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. 24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
ಎರಡನೆಯ ವಾಚನ
9ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ. 10ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. 11ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
ಸುವಾರ್ತೆ
2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು. 3ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು. 4ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. 5ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. 10ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. 11ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು. 13ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು. 16ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು