Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 3 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 20 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಅಕ್ಟೋಬರ್ 2027

ಭಾನುವಾರ · ಸ್ವರ 6

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 15ನೇ ಭಾನುವಾರ

ಶಿಲುಬೆಯ ಉನ್ನತೀಕರಣದ ನಂತರದ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ನಾಲ್ಕನೆಯ ಸುವಾರ್ತೆ

ಲೂಕ 24:1–12

1ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. 2ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು, 3ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ. 4ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು. 5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? 6ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು. 8ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, 9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು. 11ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. 12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.

ಪತ್ರಿಕೆ (ಶಿಲುಬೆಯ ಉನ್ನತೀಕರಣದ ನಂತರದ ಭಾನುವಾರ)

ಗಲಾ 2:16–20

16ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. 17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. 18ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ. 19ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. 20ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಪತ್ರಿಕೆ

2 ಕೊರಿ 4:6–15

6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.

ಸುವಾರ್ತೆ (ಶಿಲುಬೆಯ ಉನ್ನತೀಕರಣದ ನಂತರದ ಭಾನುವಾರ)

ಮಾರ್ಕ 8:34–9:1

34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? 37ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು? 38ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು. 9:1ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ಸುವಾರ್ತೆ

ಮತ್ತಾ 22:35–46

35ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, 36“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ 37ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ 38ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. 39ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. 40ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು. 41ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ, 42“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ 43ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? 44“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. 45ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು. 46ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 3 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು