ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 6 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಅಕ್ಟೋಬರ್ 2027
ಬುಧವಾರ · ಪಂಚಾಶತ್ತಮದ ನಂತರದ 16ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Conception by St Elizabeth of the Honorable Glorious Prophet, Forerunner and Baptizer of the Lord John
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ. 3ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 4ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. 5ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. 6ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. 7ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. 8ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. 9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. 10ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಪತ್ರಿಕೆ (ಮುಂದೂತ)
22ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. 23ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. 24ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. 25ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. 27“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. 28ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. 29ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. 30ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ. 31ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.
ಸುವಾರ್ತೆ
1ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ, 2ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು. 3ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು, 4ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು. 5ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ, 6“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ; 7ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು. 8ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು. 9ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು. 10‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; 11ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು. 12ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು. 13ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು. 14ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. 15ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
ಸುವಾರ್ತೆ (ಮುಂದೂತ)
5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. 7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. 8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. 9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. 10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ, 11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. 18ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. 19ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. 20ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. 21ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. 23ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. 24ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 6 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು