Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 2 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ನವೆಂಬರ್ 2027

ಮಂಗಳವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಮರಣಹೊಂದಿದ ಎಲ್ಲಾ ವಿಶ್ವಾಸಿಗಳ ಸ್ಮರಣೆ

ಸ್ಮರಣೋಲ್ಲೇಖ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 25:6–9

6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.

ಪ್ರತಿವಚನ ಕೀರ್ತನೆ

ಕೀರ್ತ 23:1–6

1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಎರಡನೆಯ ವಾಚನ

1 ಕೊರಿ 15:12–26

12ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? 13ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. 14ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. 15ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. 16ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. 17ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. 18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. 19ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. 20ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು. 21ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. 22ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. 23ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. 24ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. 26ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.

ಸುವಾರ್ತೆ

ಮಾರ್ಕ 8:27–35

ಅಥವಾ: ಯೋಹಾ 1:1–5, 9–14

27ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು. 28ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು. 29ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು. 30ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. 31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. 32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು. 33ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. 34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು