Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 9 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ನವೆಂಬರ್ 2027

ಮಂಗಳವಾರ · ಸಾಮಾನ್ಯ ಕಾಲದ 32ನೇ ವಾರ

ಹಬ್ಬಗಳು ಮತ್ತು ಸಂತರು

ಲ್ಯಾಟರನ್ ಬಸಿಲಿಕದ ಪ್ರತಿಷ್ಠಾಪನೆ

ಹಬ್ಬ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಯೆಹೆ 47:1–2, 8–9, 12

ಅಥವಾ: 1 ಕೊರಿ 3:9–11, 16–17

1ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು. 2ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು. 8ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. 9ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. 12ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಪ್ರತಿವಚನ ಕೀರ್ತನೆ

ಕೀರ್ತ 46:1–5, 7–8

11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ 4ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ 8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

ಸುವಾರ್ತೆ

ಯೋಹಾ 2:13–22

13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. 14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. 15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. 16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. 17ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. 18ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. 19ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು. 20ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು. 21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. 22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು