ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2027 › 14 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 1 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ನವೆಂಬರ್ 2027
ಭಾನುವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 21ನೇ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ 10ನೇ ಸುವಾರ್ತೆ
1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
ಪತ್ರಿಕೆ
16ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. 17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. 18ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ. 19ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. 20ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಪತ್ರಿಕೆ (ಸಂತರಾದ ಕೊಸ್ಮಸ್ ಮತ್ತು ದಮಿಯಾನ್)
27ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. 28ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. 29ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 30ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ? 31ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ. 13:1ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. 2ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. 3ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. 4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. 5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. 6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. 7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. 8ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
ಸುವಾರ್ತೆ
26ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು. 27ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು. 28ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು. 29ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು. 30ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. 31ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. 32ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು, 33ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು. 34ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು, 35ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು. 36ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು, 37ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. 38ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ, 39ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
ಸುವಾರ್ತೆ (ಸಂತರಾದ ಕೊಸ್ಮಸ್ ಮತ್ತು ದಮಿಯಾನ್)
1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 14 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು