ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 1 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಡಿಸೆಂಬರ್ 2027
ಬುಧವಾರ · ಆಗಮನ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೊದಲನೆಯ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. 10ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಸುವಾರ್ತೆ
29ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು. 30ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು. 31ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು. 32ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು. 33ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು. 34ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು. 35ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು. 36ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. 37ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು