ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 14 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಡಿಸೆಂಬರ್ 2027
ಮಂಗಳವಾರ · ಆಗಮನ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೂರನೆಯ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಶಿಲುಬೆಯ ಸಂತ ಜಾನ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ! 2ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ. 9“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು. 10ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. 11“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. 12ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು, 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
ಪ್ರತಿವಚನ ಕೀರ್ತನೆ
1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಸುವಾರ್ತೆ
28ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು 29ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು. 30ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ. 31ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 32ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
ಇಂದಿನ ಸಂತರು
- ಶಿಲುಬೆಯ ಸಂತ ಜಾನ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು