Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 20 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಡಿಸೆಂಬರ್ 2027

ಸೋಮವಾರ · ಆಗಮನ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಡಿಸೆಂಬರ್ 20

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 7:10–14

10ಮತ್ತೆ ಯೆಹೋವನು ಆಹಾಜನಿಗೆ, 11“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. 12ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಪ್ರತಿವಚನ ಕೀರ್ತನೆ

ಕೀರ್ತ 24:1–6

1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ

ಸುವಾರ್ತೆ

ಲೂಕ 1:26–38

26ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; 27ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. 28ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. 29ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. 30ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. 32ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. 33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. 34ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. 35ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. 36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. 37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. 38ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು